ಹೋಬರ್ಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಹೋಬರ್ಟ್ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಎರಡನೇ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ನಾಲ್ಕು ವಿಕೆಟ್‌ಗಳಿಂದ ಗೆದ್ದಿದೆ. ಸರಣಿಯನ್ನು ಗೆಲ್ಲಬೇಕಾದರೆ ಭಾರತ ತಂಡಕ್ಕೆ ಇಂದಿನ ಪಂದ್ಯ ನಿರ್ಣಾಯಕವಾಗಿದೆ. ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬಹುದು. ಅಲ್ಲದೆ 4ನೇ ಮತ್ತು 5ನೇ ಪಂದ್ಯಗಳಲ್ಲಿ ಗೆದ್ದು ಸರಣಿ ಜಯಿಸುವ ಅವಕಾಶವನ್ನು ಹೊಂದಿದೆ. ಹೀಗಾಗಿ ಸರಣಿ ಗೆಲ್ಲಬೇಕಿದ್ದರೆ ಇಂದಿನ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಲೇಬೇಕು.
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಕಳೆದ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಪಂದ್ಯದಿಂದ ಹೊರಗುಳಿದಿದ್ದಾರೆ.