ಕಟಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗಿವೆ. ಕಳೆದ ಪಂದ್ಯದಲ್ಲಿ ಮೊಣಕಾಲಿನ ನೋವಿನ ಸಮಸ್ಯೆಯಿಂದಾಗಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅನಿವಾರ್ಯವಾಗಿ ಹೊರಗುಳಿದಿದ್ದರು. ಆದರೆ ಈ ಪಂದ್ಯಕ್ಕೆ ಅವರು ಫಿಟ್ ಆಗಿ ಕಮ್ ಬ್ಯಾಕ್ ಮಾಡಿದ್ದಾರೆ. ಅವರಿಗಾಗಿ ಯಶಸ್ವಿ ಜೈಸ್ವಾಲ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ಇನ್ನು, ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಆಂಗ್ಲರನ್ನು ಕಾಡಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಈ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ. ಇದು ಅವರ ಮೊದಲ ಏಕದಿನ ಪಂದ್ಯವಾಗಿದ್ದು ಹಿರಿಯ ಸ್ಪಿನ್ನರ್ ರವೀಂದ್ರ ಜಡೇಜಾ ಅವರ ಕೈಯಿಂದ ಚೊಚ್ಚಲ ಪಂದ್ಯದ ಕ್ಯಾಪ್ ಗೌರವ ಪಡೆದರು. ಅವರಿಗಾಗಿ ಕುಲದೀಪ್ ಯಾದವ್ ಸ್ಥಾನ ಕಳೆದುಕೊಂಡಿದ್ದಾರೆ.
ಮೊದಲ ಪಂದ್ಯವನ್ನು ಭಾರತ ಗೆದ್ದುಕೊಂಡು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.