ಅಹಮದಾಬಾದ್: ಬೌಲರ್‌ಗಳ ಸಾಂಘಿಕ ದಾಳಿಯ ಬಳಿಕ ಕನ್ನಡಿಗ ಕೆ.ಎಲ್.ರಾಹುಲ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಭಾರತ ತಂಡವು ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಮೊದಲ ದಿನ ಮೇಲುಗೈ ಸಾಧಿಸಿದೆ,
ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭಗೊಂಡಿದೆ. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ 162 ರನ್‌ಗಳಿಗೆ ಆಲೌಟ್ ಆದರೆ, ಭಾರತ ದಿನದಾಟದ ಅಂತ್ಯಕ್ಕೆ 121 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಪರ ಆರಂಭಿಕರು ನಿರಾಸೆ ಮೂಡಿಸಿದರು. ವೆಸ್ಟ್ ಇಂಡಿಸ್ 44.1 ಓವರ್‌ಗಳಲ್ಲಿ 162 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಭಾರತ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದರೆ, ಇವರಿಗೆ ಉತ್ತಮ ಸಾಥ್ ನೀಡಿದ ಜಸ್‌ಪ್ರೀತ್ ಬುಮ್ರಾ 3, ಕುಲದೀಪ್ ಯಾದವ್ 2 ಹಾಗೂ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಮಿಂಚಿದರು.
ತನ್ನ ಮೊದಲ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‌ಗೆ 68 ರನ್‌ಗಳ ಜೊತೆಯಾಟ ಆಡಿದರು. ಈ ಹಂತದಲ್ಲಿ 36 ರನ್ ಗಳಿಸಿದ್ದ ಜೈಸ್ವಾಲ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು.
ನಂತರ ಬಂದ ಸಾಯಿ ಸುದರ್ಶನ್ (7) ಬೇಗನೆ ವಿಕೆಟ್ ಒಪ್ಪಿಸಿದರು. ಸದ್ಯ, 53 ರನ್ ಗಳಿಸಿರುವ ಕೆಎಲ್ ರಾಹುಲ್ ಹಾಗೂ 18 ರನ್ ಗಳಿಸಿರುವ ನಾಯಕ ಶುಭಮನ್ ಗಿಲ್ ಅಜೇಯರಾಗಿ ಎರಡನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.