ಆಸ್ಟ್ರೇಲಿಯಾ: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ 48 ರನ್‌ಗಳಿಂದ ಜಯ ಸಾಧಿಸಿ, ಐದು ಪಂದ್ಯಗಳ ಸರಣಿಯಲ್ಲಿ 2–1 ಮುನ್ನಡೆ ಪಡೆದಿದೆ.
ಕ್ವೀನ್ಸ್‌ಲ್ಯಾಂಡ್‌ನ ಕರಾರಾ ಓವಲ್‌ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 168 ರನ್ ಗಳಿಸಿತು. 46 ರನ್ ಗಳಿಸಿದ ಉಪನಾಯಕ ಶುಭಮನ್ ಗಿಲ್ ಉಪಯುಕ್ತ ಕಾಣಿಕೆ ನೀಡಿದರು.
ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು ಭಾರತದ ಸ್ಪಿನ್ ದಾಳಿಗೆ ತತ್ತರಿಸಿತು. 18.2 ಓವರ್‌ಗಳಲ್ಲಿ 119 ಸ್ಕೋರ್ ಆಲೌಟ್ ಆಯಿತು. ಅಕ್ಷರ್ ಪಟೇಲ್ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ ಅವರು ಎಂಟು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಚ್ 30 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಈ ಮೂಲಕ ಭಾರತ ಐದು ಪಂದ್ಯಗಳ ಸರಣಿಯಲ್ಲಿ ಕೇವಲ ಒಂದು ಪಂದ್ಯ ಬಾಕಿ ಇರುವಂತೆಯೇ 2-1 ಮುನ್ನಡೆ ಸಾಧಿಸಿದೆ. ಸರಣಿಯ ಕೊನೆಯ ಪಂದ್ಯ ಶನಿವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು. ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಪಾರಮ್ಯ ಮರೆದರೆ, ಮೂರನೇ ಪಂದ್ಯವನ್ನು ಭಾರತ ಗೆದ್ದಿತ್ತು.