Publish Date: Mon, 14 Nov 2022 (09:29 IST)
Updated Date: Mon, 14 Nov 2022 (09:11 IST)
ಅಂಕಾರಾ : ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಾರೀ ಸ್ಫೋಟ ಉಂಟಾಗಿ 4 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ಟರ್ಕಿಯ ಇಸ್ತಾಂಬುಲ್ನಲ್ಲಿ ನಡೆದಿದೆ.
ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಇಸ್ತಾಂಬುಲ್ನ ಇಸ್ತಿಕ್ಲಾಲ್ನಲ್ಲಿರುವ ಮಾರುಕಟ್ಟೆ ಪ್ರದೇಶದಲ್ಲಿ ಇಂದು ಮಧ್ಯಾಹ್ನದ ವೇಳೆ ಸ್ಫೋಟ ಸಂಭವಿಸಿದೆ.
ಸ್ಫೋಟಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್ ಗವರ್ನರ್ ಅಲಿ ಯರ್ಲಿಕಾಯಾ ಟ್ವೀಟ್ ಮಾಡಿದ್ದಾರೆ.
ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಜನರು ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದ್ದು, ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.