ಮುಲ್ಲನಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಮುಲ್ಲನಪುರದಲ್ಲಿ ಅದೇ ತಂಡದ ವಿರುದ್ಧ ಕಣಕ್ಕೆ ಇಳಿಯಲು ಸಜ್ಜಾಗಿದ್ದು, ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ಮೂರು ಪಂದ್ಯಗಳಲ್ಲಿಯೂ ಸೋತು ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದೆ. ಆದರೆ ತವರಿನಾಚೆಯ ನಡೆದ ಎಲ್ಲ ನಾಲ್ಕು ಪಂದ್ಯಗಳಲ್ಲಿಯೂ ಜಯಭೇರಿ ಬಾರಿಸಿದೆ. ಹೀಗಾಗಿ, ಇಂದಿನ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದಲ್ಲಿದೆ.
ಚಿನ್ನಸ್ವಾಮಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವು ಆರ್‌ಸಿಬಿಯನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಮಳೆಯಿಂದಾಗಿ ಸುಮಾರು 2 ಗಂಟೆಗೂ ಹೆಚ್ಚು ವಿಳಂಬವಾಗಿ ಆರಂಭವಾದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್ ವಿಭಾಗ ಕುಸಿದಿತ್ತು. 14 ಓವರ್‌ಗಳಿಗೆ (ಇನಿಂಗ್ಸ್‌ವೊಂದಕ್ಕೆ) ನಿಗದಿಯಾಗಿದ್ದ ಪಂದ್ಯದಲ್ಲಿ ಆರ್‌ಸಿಬಿ 9 ವಿಕೆಟ್‌ಗಳಿಗೆ 95 ರನ್ ಗಳಿಸಿತ್ತು. ಶ್ರೇಯಸ್ ಅಯ್ಯರ್ ಬಳಗವು 12.1 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 98 ರನ್ ಗಳಿಸಿ ಜಯಿಸಿತ್ತು.
ಒಟ್ಟು ಏಳು ಪಂದ್ಯಗಳನ್ನು ಆಡಿರುವ ಬೆಂಗಳೂರು ತಂಡವು ನಾಲ್ಕರಲ್ಲಿ ಗೆದ್ದ, ಮೂರರಲ್ಲಿ ಸೋಲು ಎಂಟು ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪಂಜಾಬ್ ತಂಡವು ಅಷ್ಟೇ ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.