Publish Date: Wed, 24 Sep 2008 (11:35 IST)
Updated Date: Wed, 24 Sep 2008 (11:34 IST)
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಬುಧವಾರದಿಂದ ಕರೆ ನೀಡಿದ ಎರಡು ದಿನಗಳ ಮುಷ್ಕರ ಆರಂಭಗೊಂಡಿದ್ದು,ಬ್ಯಾಂಕ್ ವಹಿವಾಟು ನಡೆಯದೆ ಗ್ರಾಹಕರು ಪರದಾಡುವಂತಾಗಿದೆ.
ದೇಶಾದ್ಯಂತ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳ ಸುಮಾರು 10 ಲಕ್ಷ ಮಂದಿ ನೌಕರರು ಈ ಮುಷ್ಕರದಲ್ಲಿ ಭಾಗವಹಿಸಿರುವುದಾಗಿ ಯುಎಫ್ ಬಿಯು ಹೇಳಿದೆ.
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಅಂಗವಾಗಿ ಬುಧವಾರ ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದೆ.
ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನ ಪ್ರಸ್ತಾಪವನ್ನು ಕೈಬಿಡಬೇಕು. ಹಾಗೆಯೇ, ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಬೇಕು, ನಿವೃತ್ತಿ ವೇತನ ಸಂಬಂಧ ಗೊಂದಲ ಪರಿಹರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಲಾಗುತ್ತಿದೆ.
ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಶೇ.7ರಷ್ಟು ಷೇರುಗಳ ಮಾರಾಟ ಮಾಡುವ ಮೂಲಕ ಖಾಸಗೀಕರಣ ಮಾಡುವ ಪ್ರಸ್ತಾಪವನ್ನು ಕೂಡಲೇ ಹಿಂತೆಗೆದುಕೊಳ್ಳುವಂತೆ ಒಕ್ಕೂಟ ಆಗ್ರಹಿಸಿದೆ.
ಈ ನಡುವೆ ಎರಡು ದಿನಗಳ ಕಾಲ ನಡೆಯಲಿರುವ ಮುಷ್ಕರದಲ್ಲಿ ಇಂಡಿಯನ್ ನ್ಯಾಷನಲ್ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಹಾಗೂ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಂಘಟನೆಗಳು ಪಾಲ್ಗೊಳ್ಳದಿರಲು ನಿರ್ಧರಿಸಿದೆ.
ಪ್ರಮುಖ ಬೇಡಿಕೆಗಳಾದ ವೇತನ ಪರಿಷ್ಕರಣೆ, 2ನೇ ಅವಧಿಗೆ ಪಿಂಚಣಿ ಮತ್ತು ಅನುಕಂಪ ಆಧಾರಿತ ನೇಮಕಾತಿಗೆ ಕೇಂದ್ರ ಸರ್ಕಾರ ಹಾಗೂ ಬ್ಯಾಂಕ್ ಮಂಡಳಿಗಳು ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ಮುಷ್ಕರದಲ್ಲಿ ಪಾಲ್ಗೊಳ್ಳದಿರುವಂತೆ ತೀರ್ಮಾನಿಸಲಾಗಿದೆ ಎಂದು ಸಂಘ ತಿಳಿಸಿದೆ.