Publish Date: Sat, 15 Mar 2025 (14:07 IST)
Updated Date: Sat, 15 Mar 2025 (14:10 IST)
ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳಿಗೆ ಅಗೆದಷ್ಟು ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಪ್ರಕರಣದ ಜಾಡು ಹಿಡಿದಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಈಗಾಗಲೇ ಡಿಆರ್‌ಐನಿಂದ ಬಂಧನದಲ್ಲಿರುವ ನಟಿ ರನ್ಯಾ ರಾವ್ ಆಪ್ತನನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದು, ಡ್ರಿಲ್ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯ ಕಾರು ಚಾಲಕ ದೀಪಕ್ ಎಂಬಾತನನ್ನು ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
ರನ್ಯಾ ರಾವ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮಾ.10 ರಂದು ಕೋರ್ಟ್ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಇದೇ 24 ರವರೆಗೆ ರನ್ಯಾ ರಾವ್ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾಳೆ.
ಈ ಮಧ್ಯೆ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಚಾಲಕ ದೀಪಕ್ ಪಾತ್ರದ ಕುರಿತು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಆತನಿಂದ ಹೊರತೆಗೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ದುಬೈನಿಂದ ಇದೇ 3 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದು ಹೇಳಿಕೊಂಡಿದ್ದರು. ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ಪತ್ತೆಯಾಗಿತ್ತು.