Select Your Language

Notifications

webdunia
webdunia
webdunia
webdunia

1 ಕೋಟಿ ಲಂಚ ಪ್ರಕರಣ: ತನಿಖೆಗೆ ಯೋಜನೆ ಸಿದ್ಧ ಎಂದ ಕಮಲ್

1 ಕೋಟಿ ಲಂಚ ಪ್ರಕರಣ: ತನಿಖೆಗೆ ಯೋಜನೆ ಸಿದ್ಧ ಎಂದ ಕಮಲ್
ಬೆಂಗಳೂರು , ಗುರುವಾರ, 2 ಜುಲೈ 2015 (15:53 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಖ್ಯಸ್ಥ ಕಲಮ್ ಪಂತ್ ಪ್ರತಿಕ್ರಿಯಿಸಿದ್ದು, ಪ್ರಕರಣದ ಸಮಗ್ರ ತನಿಖೆಗೆ ಯೋಜನೆ ಸಿದ್ಧಗೊಂಡಿದ್ದು, ಶೀಘ್ರವೇ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಕಲೆ ಹಾಕಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆ ಸಿದ್ಧಪಡಿಸಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ. ಆದರೆ ಪ್ರಸ್ತುತ ತನಿಖೆ ಆರಂಭಿಸಲು ಸಿಬ್ಬಂದಿ ಹಾಗೂ ತಾಂತ್ರಿಕ ಉಪಕರಣಗಳ ಕೊರತೆ ಇದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದ್ದೇನೆ. ಸರ್ಕಾರ ಶೀಘ್ರವೇ ಸಿಬ್ಬಂದಿಗಳನ್ನು ನಿಯೋಜಿಸಿ ಸಹಕಾರ ನೀಡಿದಲ್ಲಿ ತನಿಖೆ ಆರಂಭಿಸುವುದರಲ್ಲಿ ಸಂದೇಹವಿಲ್ಲ ಎಂದರು. 
 
ಇನ್ನು ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾ.ವೈ. ಭಾಸ್ಕರ್ ರಾವ್ ಅವರು ಸರ್ಕಾರಕ್ಕೆ ತನಿಖೆಗಾಗಿ ತಂಡವನ್ನು ರಚಿಸಿ ಎಂದು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತುತ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಸ್ಥರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 
 
ಏನಿದು ಪ್ರಕರಣ?: 
ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

Share this Story:

Follow Webdunia kannada