ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವುದು ಮಕ್ಕಳಲ್ಲಿ ಆತಂಕ ಮೂಡಿಸಿದೆ. ಈಗ ಮತ್ತೊಂದು ಖಾಸಗಿ ಶಾಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿನ ಉಳಿದ ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆಯನ್ನು ನಡೆಸಲು ಸೂಚಿಸಲಾಗಿದೆ. ಜೊತೆಗೆ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ವಾರದ ಹಿಂದಷ್ಟೇ ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಗ್ರಾಮದ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದು ಕಾಫಿನಾಡಿನ ಜನರ ಆತಂಕಕ್ಕೆ ಕಾರಣವಾಗಿತ್ತು. ಈಗ ಪುನಃ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಬಂದವರು ಕೋವಿಡ್ ನಿಯಮಾವಳಿಗಳನ್ನು ಮರೆಯುತ್ತಿದ್ದಾರೆ. ಇದರಿಂದಲೇ ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ ಎಂದು ಪ್ರವಾಸಿಗರ ವಿರುದ್ಧ ಜನರು ಅಸಮಾಧಾನ ಹೊರಹಾಕಿದ್ದಾರೆ.