ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ನಿಂದ ಗೋರಖಪುರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ನಿನ್ನೆ ರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆ ರಸ್ತೆಯಲ್ಲಿ ಹೋಗುತ್ತಿದ್ದ ಕೆಲವು ಪ್ರಯಾಣಿಕರು ಈ ಘಟನೆಯ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.