ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಒಟ್ಟು 195 ಬರ ತಾಲ್ಲೂಕುಗಳು ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ. ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.