ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿ ಆರೋಪಿಗಳು ತನಿಖೆ ಎದುರಿಸುತಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಪೊಲೀಸ್ ಠಾಣೆಯ ಕಾಂಪೌಂಡ್ ಸುತ್ತಾ ಶಾಮಿಯಾನ ಹೊದಿಸಲಾಗಿದೆ.
ಇನ್ನೂ ದರ್ಶನ್ ಅವರು ಠಾಣೆಯಲ್ಲಿರುವ ಕಾರಣ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಘೋಷಣೆ ಕೂಗಿದ್ದರಿಂದ ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಅದಲ್ಲದೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಸಾರ್ವಜನಿಕರು ತೊಂದರೆಗೆ ಒಳಗಾಗುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ನಟ ದರ್ಶನ್ ಅವರನ್ನು ಮರೆಮಾಚಲು ಠಾಣೆಯ ಸುತ್ತಾ ಶಾಮಿಯಾನ ಹಾಕಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಅದಲ್ಲದೆ ಪೊಲೀಸ್ ಠಾಣೆ ಸುತ್ತ ಶಾಮಿಯಾನದ ಪರದೆ ಹಾಕಿರುವುದು ಮತ್ತು ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.