Publish Date: Fri, 31 Jan 2025 (17:52 IST)
Updated Date: Fri, 31 Jan 2025 (17:55 IST)
ಸುತ್ತೂರು: ಮೈಕ್ರೊಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಶೀಘ್ರದಲ್ಲೇ ಸುಗ್ರೀವಾಜ್ಞೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಇಲ್ಲಿ ಸುತ್ತೂರು ಮಠದಿಂದ ಶುಕ್ರವಾರ ಆಯೋಜಿಸಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ನಿಮ್ಮ ಜತೆಗಿದೆ ಎಂದು ಅಭಯ ನೀಡಿದರು.
ಆರ್‌ಬಿಐ (ಭಾರತೀಯ ರಿಸರ್ವ್ ಬ್ಯಾಂಕ್) ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. ಜನರು ಆತಂಕಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಮಾಡಬಾರದು ಎಂದು ಕೋರಿದರು.
ಮೈಕ್ರೊ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಆರ್‌ಬಿಐ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಿ, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.