ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ. ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮುಖ್ಯಮಂತ್ರಿ ಯಾರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಅಧಿಕಾರ ಹಸ್ತಾಂತರ ಜಗಳ ತಾರಕಕ್ಕೇರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಸ್ತಾಂತರ ಕಿತ್ತಾಟಗಳಿಂದಾಗಿ ಸರ್ಕಾರದ ಕೆಲಸಗಳು ಸ್ಥಗಿತಗೊಂಡಿದೆ ಎಂದು ದೂರಿದರು.
ಮುಖ್ಯಮಂತ್ರಿ ಸ್ಥಾನ ಗೊಂದಲದ ಕುರಿತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ, ಸರ್ಕಾರದ ಕೆಲಸಗಳು ಕಾರ್ಯನಿರ್ವಹಿಸುವುದಿಲ್ಲ, ಅಧಿಕಾರಿಗಳು ಕೆಲಸ ಮಾಡುವುದಿಲ್ಲ ಮತ್ತು ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ ಎಂದು ಹೇಳಿದರು.
ಕೆಲವು ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಲ್ಲಿ ಉಳಿಸಲು ಕೆಲಸ ಮಾಡುತ್ತಿದ್ದಾರೆ, ಆದರೆ ಇನ್ನೊಂದು ಗುಂಪು ಅವರನ್ನು ತೆಗೆದುಹಾಕಲು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.
ಕಾಂಗ್ರೆಸ್ ನಾಯಕರ ಅಧಿಕಾರ ಕಿತ್ತಾಟಗಳಿಂದ ರಾಜ್ಯದ ಜನರು ಬಳಲುತ್ತಿದ್ದಾರೆ. ಪರಿಸ್ಥಿತಿ ಎಷ್ಟರ ಮಟ್ಟಿಗೆ ತಲುಪಿದೆಯೆಂದರೆ, ವಿಚಾರಣಾಧೀನ ಕೈದಿಗಳಾಗಿರುವ ಇಬ್ಬರು ಶಾಸಕರ ಬೆಂಬಲ ಪಡೆಯಲು ಶಿವಕುಮಾರ್ ಜೈಲಿಗೆ ಹೋಗಿದ್ದರು ಎಂದು ಅಶೋಕ್ ವ್ಯಂಗ್ಯವಾಡಿದರು.