Publish Date: Fri, 10 May 2024 (11:54 IST)
Updated Date: Fri, 10 May 2024 (11:56 IST)
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನಲ್ಲಿ ಮಹಿಳೆಯ ಅಪಹರಣ ಪ್ರಕರಣಕ್ಕೂ ಇದಕ್ಕೂ ಸಂಬಂಧವಿದೆ ಎನ್ನಲಾಗಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು ಸಂತ್ರಸ್ತೆಯನ್ನು ಪೊಲೀಸರ ಎದುರು ಹಾಜರುಪಡಿಸಿದ್ದಾರೆ. ಜೊತೆಗೆ ಸ್ಥಳ ಮಹಜರನ್ನೂ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸದ್ಯಕ್ಕೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಇನ್ನೂ ಭಾರತಕ್ಕೆ ಬಂದಿಲ್ಲ. ಅವರ ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆಯಾದರೂ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ ಅವರನ್ನು ಭಾರತಕ್ಕೆ ಕರೆತರಲು ತನಿಖಾ ತಂಡ ಕಾರ್ಯಪ್ರವೃತ್ತವಾಗಿದೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಎಚ್ ಡಿ ರೇವಣ್ಣರನ್ನು ಬಂಧಿಸಲಾಗಿದೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಮೇ 14 ರವರೆಗೆ ಅವರ ನ್ಯಾಯಾಂಗ ಬಂಧನ ಅವಧಿ ಇರಲಿದೆ. ಇದರ ನಡುವೆ ಪ್ರಜ್ವಲ್ ಮಾತ್ರ ಭಾರತಕ್ಕೆ ಬರದೇ ನುಣುಚಿಕೊಳ್ಳುತ್ತಿದ್ದಾರೆ.