ಬೆಂಗಳೂರು, ಸೆ 06 : ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಸರ್ಕಾರದ ಮೇಲೆ ಭಾರೀ ಒತ್ತಡ ಹಾಕಲಾಗಿತ್ತು.
ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಒಪ್ಪಿಗೆ ಕೊಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ಹಲವಾರು ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೂರು ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕೊಡಲಾಗಿದೆ. ಆದರೆ ಮೆರವಣಿಗೆ ನಡೆಸಲು ಅನುಮತಿ ಇಲ್ಲ. ಸಂಗೀತ, ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ. ಸೆಪ್ಟೆಂಬರ್ 9ರಂದು ಗೌರಿ ವೃತ ಇದ್ದು, ಸೆಪ್ಟೆಂಬರ್ 10ರಂದು ಗಣೇಶ ಚತುರ್ಥಿ ಇದೆ.
ಸಾರ್ವಜನಿಕ ಗಣೇಶೋತ್ಸವ ಯಾವ ರೀತಿ ಇರಬೇಕು ಎಂದು ಸರ್ಕಾರದಿಂದ ಇಂದು ಸಂಜೆ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಾ. ದೇವಿಶೆಟ್ಟಿ, ಡಾ. ಮಂಜುನಾಥ್, ವೈರಾಲಜಿಸ್ಟ್ ಡಾ. ರವಿ, ಡಾ. ಸುದರ್ಶನ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಶುಕ್ರವಾರ, ಶನಿವಾರ ಮತ್ತು ಭಾನುವಾರ ಮಾತ್ರ ಸಾರ್ವಜನಿಕ ಗಣೇಶೋತ್ಸವ ಮಾಡಬೇಕು. ಪ್ರತಿಷ್ಠಾಪನೆ ಮಾಡಿದ ಗಣೇಶಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡಲು ಅವಕಾಶವಿಲ್ಲ. ಬಿಬಿಎಂಪಿ, ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು.
ಸಾರ್ವಜನಿಕ ಗಣೇಶೋತ್ಸವ ಅತ್ಯಂತ ಸರಳವಾಗಿ ನಡೆಯಬೇಕು. ಒಂದು ಏರಿಯಾದಲ್ಲಿ ಇಂತಿಷ್ಟು ಗಣೇಶವಿಗ್ರಹಗಳನ್ನು ಮಾತ್ರ ಕೂರಿಸಬೇಕು ಎಂದು ಷರತ್ತು ಹಾಕಲಾಗಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಬಿಬಿಎಂಪಿ ಮತ್ತು ಜಿಲ್ಲಾಡಳಿತದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಕೋವಿಡ್ 3ನೇ ಅಲೆ ಭೀತಿ ಹಿನ್ನಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಆಚರಣೆಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಬಿಜೆಪಿ ಪಕ್ಷದ ಹಲವು ಶಾಸಕರು, ಸಚಿವರು ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.
ಕಳೆದ ವರ್ಷ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿರಲಿಲ್ಲ. ಮನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಹಬ್ಬವನ್ನು ಆಚರಣೆ ಮಾಡಬಹುದಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ.
ಸಾರ್ವಜನಿಕ ಗಣೇಶೋತ್ಸವ ಅದ್ದೂರಿಯಾಗಿ ಆಚರಣೆ ಮಾಡಲು ಅವಕಾಶ ನೀಡಿದರೆ ಅಲ್ಲಿ ಹೆಚ್ಚು ಜನರು ಸೇರುತ್ತಾರೆ. ಆಗ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಆದ್ದರಿಂದ ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು ಷರತ್ತು ಬದ್ಧ ಅನುಮತಿ ನೀಡಿದ್ದಾರೆ.
ಸಾರ್ವಜನಿಕ ಗಣೇಶೋತ್ಸವ ಯಾವ ರೀತಿ ಮಾಡಬೇಕು ಎಂದು ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡುತ್ತದೆ. ಆದರೆ ಅದನ್ನು ಪಾಲನೆ ಮಾಡುವವರು, ಪಾಲನೆಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಸ್ಥಳೀಯ ಆಡಳಿತ ಮೇಲೆ ಇರುತ್ತದೆ.
ಹಲವಾರು ಜಿಲ್ಲಾಡಳಿತಗಳು ಈಗಾಗಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿವೆ. ಈಗ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನ್ವಯ ಜಿಲ್ಲಾಡಳಿತ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಲಿದೆ. ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಸರ್ಕಾರದ ಮತ್ತು ಜನರ ಜೊತೆ ಸಹಕಾರ ನೀಡಿದರೆ ಕೋವಿಡ್ ಸೋಂಕು ಹರಡುವಿಕೆ ತಡೆಯಬಹುದಾಗಿದೆ.
ಈಗಾಗಲೇ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಸಹ ಸರಳವಾಗಿ ಆಚರಣೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಬಾರಿ ಸಹ ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ನಡೆಯಲಿದೆ.