ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಸೋಮವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪಾರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್.ವೆಂಕಟೇಶ್ ಅವರು ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾತನಾಡಿ ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪಾರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವುದು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಗುಲಾಬಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪಾರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸಲು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಜನರಿಗೆ ಗುಲಾಬಿ ಹೂ ನೀಡಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಂಡುಬಂದಲ್ಲಿ ದಂಡ/ಶುಲ್ಕ ವಿಧಿಸಲಾಗುವುದು ಎಂದು ಅವರು ತಿಳಿಸಿದರು.
ತಂಬಾಕು ಬಳಕೆಯಿಂದ ಕ್ಯಾನ್ಸರ್ ರೋಗ ಬರಲಿದ್ದು ಜನರಿಗೆ ಅರಿವು ಮೂಡಿಸುವುದು, ತಂಬಾಕು ಸೇವನೆಯಿಂದ ಸಮಾಜ, ಪರಿಸರ ಮತ್ತು ಮಾನವನ ಮೇಲೆ ಬೀರುವ ಅಡ್ಡಪರಿಣಾಮಗಳು ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸುವ ಗುರಿ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್, ತಾಲ್ಲೂಕು ಆರೋಗ್ಯ ಅಧಿಕಾರಿ ಚೇತನ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ಇತರರು ಇದ್ದರು.