ಲಿಖಿಂಪುರ ಖೇರಿ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್ 15ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ಪೀಠಕ್ಕೆ ವಕೀಲ ಪ್ರಶಾಂತ್ ಭೂಷಣ್ ಅವರು ತಮ್ಮ ಅರ್ಜಿಯನ್ನು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಮುಂದಿನ ಮಂಗಳವಾರ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ಎ.ಎಸ್.ಬೊಪ್ಪಣ್ಣ ಮತ್ತು ಹಿಮಾ ಕೊಯ್ಲಿ ಅವರನ್ನು ಒಳಗೊಂಡ ಪೀಠ ತಿಳಿಸಿತು.
ಮಿಶ್ರಾಗೆ ನೀಡಲಾದ ಜಾಮೀನು ರದ್ದು ಕೋರಿ ರೈತರಾದ ಜಗಜೀತ್ ಸಿಂಗ್, ಪವನ್ ಕಶ್ಯಪ್ ಮತ್ತು ಸುಖ್ವಿಂದರ್ ಸಿಂಗ್ ಅವರು ಪ್ರಶಾಂತ್ ಭೂಷಣ ಮೂಲಕ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.