ಬಳ್ಳಾರಿ: ಇತ್ತೀಚೆಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸರಣಿ ಸಾವಿನ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.
ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ಇಂದು ಅಭಿನಂದನಾ ಸಮಾರಂಭದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಈಗಾಗಲೇ 2 ಲಕ್ಷ ರೂ. ಪರಿಹಾರ ನೀಡಿದ್ದೇವೆ ಇನ್ನೂ 3 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.
ಈಗಾಗಲೇ ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಟೀಕೆಗೆ ಗುರಿಯಾಗಿತ್ತು. ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಈ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪವಾಗಲಿದೆ. ಇದರ ಬೆನ್ನಲ್ಲೇ ಸಚಿವರು ಪರಿಹಾರ ಘೋಷಣೆ ಮಾಡಿದ್ದಾರೆ.
ನವಂಬರ್ 9 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಎಲ್ಲಾ ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಐವರು ಮೃತಪಟ್ಟಿದ್ದಾರೆ. ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊನ್ನೆಯಷ್ಟೇ ಸುಮಯಾ ಎಂಬ ಬಾಣಂತಿ ಸಾವಿಗೀಡಾಗಿದ್ದರು. ಕಳಪೆ ಗುಣಮಟ್ಟದ ಔಷಧಿಯಿಂದಲೇ ಸಾವು ಸಂಭವಿಸಿದೆ ಎನ್ನಲಾಗಿದೆ.