Publish Date: Wed, 23 Sep 2026 (09:04 IST)
Updated Date: Wed, 23 Sep 2026 (09:08 IST)
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು,ಇಂದು ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ನದಿ ತೀರ ಹಾಗೂ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡು: ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ದಿನಪೂರ್ತಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು: ಬಿಸಿಲ ಜೊತೆಗೆ ಅಲ್ಲಲ್ಲಿ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಇನ್ನುಳಿದಂತೆ ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲು ಹಾಗೂ ಧೂಳಿನಿಂದ ಕೂಡಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಅಥವಾ ಸಂಜೆಯ ವೇಳೆಗೆ ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ