ಬೆಂಗಳೂರು: ಬೆಂಗಳೂರಿನ ಕನಸುಗಾರ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಜ್ಯಪಾಲರು, ಮಾಜಿ ಸ್ಪೀಕರ್, ಕೇಂದ್ರದ ಮಾಜಿ ಸಚಿವ, ಧೀಮಂತ ರಾಜಕಾರಣಿಯಾಗಿರುವ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ಕೊನೆಯುಸಿರೆಳೆದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು. ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.<>