ಬೆಂಗಳೂರು: ಮತ ಕಳ್ಳತನವಾಗುತ್ತಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ರದ್ದಾಗುತ್ತಿದ್ದಂತೇ ಇತ್ತ ಬಿಜೆಪಿ ಕೂಡಾ ಪ್ರತಿಭಟನೆ ಕ್ಯಾನ್ಸಲ್ ಮಾಡಿಕೊಂಡಿದೆ.
ನಾಳೆ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮತಗಳ್ಳತನ ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆಗಳೂ ನಡೆದಿದ್ದವು.
ಆದರೆ ಜಾರ್ಖಂಡ್ ನಲ್ಲಿ ಮಾಜಿ ಸಿಎಂ ಶಿಬು ಸೊರೇನ್ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದಲ್ಲಿ ಭಾಗಿಯಾಗಲು ರಾಹುಲ್ ಸೇರಿದಂತೆ ಕಾಂಗ್ರೆಸ್ ನಾಯಕರು ತೆರಳಲಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಅತ್ತ ಕಾಂಗ್ರೆಸ್ ಸಮಾವೇಶ ರದ್ದಾಗುತ್ತಿದ್ದಂತೇ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯೂ ಕ್ಯಾನ್ಸಲ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಮಾಹಿತಿ ನೀಡಿದ್ದಾರೆ. ರಾಹುಲ್ ಪ್ರತಿಭಟನೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.