ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯದ ಸಿಎಂಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಇಂದು ಮುಂಬೈನಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಷಿ ಅವರು ದೇವೇಂದ್ರ ಫಡ್ನಾವೀಸ್ ಅವರ ಜೊತೆ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿ, ರಾಜ್ಯದಲ್ಲಿರುವ ನೀರಿನ ಅಭಾವದ ಕುರಿತು ಮನವರಿಕೆ ಮಾಡಿಕೊಟ್ಟರು.
ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಅನಂತ್‌ಕುಮಾರ್ ನಿಯೋಗ ದೇವೇಂದ್ರ ಫಡ್ನಾವೀಸ್ ಬಳಿ ಮನವಿ ಮಾಡಿದೆ.
ಮಹದಾಯಿ ನೀರನ್ನು ಕೇವಲ ಕುಡಿಯುವ ನೀರಿಗಾಗಿ ಬಳಸಿಕೊಳ್ಳಲಾಗುತ್ತದೆ. ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುವುದಿಲ್ಲ. ಹೀಗಾಗಿ ಯೋಜನೆಗೆ ಅಡ್ಡಿಪಡಿಸದಂತೆ ಕೋರಿ ಮನವಿ ಮಾಡಲಾಗಿದೆ. ಈಗಾಗಲೇ ಈ ಕುರಿತು ಗೋವಾ ಮುಖ್ಯಮಂತ್ರಿ ಲಕ್ಷ್ಮೀ ಪರ್ಸೇಕರ್ ಅವರ ಜೊತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಮುಂಬೈನಲ್ಲಿ ಸಭೆ ಕರೆದಿರುವುದು ಸ್ವಾಗತಾರ್ಹ. ಈ ಮಹತ್ವದ ಸಭೆಯಿಂದ ಮಹದಾಯಿ ವಿವಾದ ಇತ್ಯರ್ಥವಾಗಲಿದೆ ಎಂದು ಬಿಜೆಪಿ ನಿಯೋಗ ವಿಶ್ವಾಸ ವ್ಯಕ್ತಪಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ