ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ಬಿಜೆಪಿ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರು ಹಲವು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಇದ್ದವರು. ಬೆಂಗಳೂರನ್ನು ಐ.ಟಿ-ಬಿ.ಟಿ. ಹಬ್ ಆಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನೂ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕಳೆದ 6 ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣಾ ಅವರು ಇಂದು ಮುಂಜಾನೆ ನಿಧನರಾದರು. ಇವರ ಅಗಲಿಕೆಗೆ ರಾಜಕೀಯ ಗಣ್ಯರು, ಸಿನಿಮಾ ರಂಗದವರು ಸಂತಾಪ ಸೂಚಿಸುತ್ತಿದ್ದಾರೆ.