ಬೆಂಗಳೂರು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದ ನಿವಾಸಿ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಮೂವರ ವಿರುದ್ಧ ದೂರು ದಾಖಲಾಗಿದೆ.
ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥರ್‌ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮೂವರ ಕಿರುಕುಳದಿಂದ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿನಯ್ ಸೋಮಯ್ಯ ಅವರ ಸಹೋದರ ಜೀವನ್ ಸೋಮಯ್ಯ ದೂರಿನಂತೆ ಪ್ರಕರಣ ದಾಖಲಾಗಿದೆ.
ಕೊಡಗು ಸಮಸ್ಯೆಗಳು ಎನ್ನುವ ವಾಟ್ಸ್‌ಆ್ಯಪ್ ಗ್ರೂಪ್ ಅಡ್ಮಿನ್ ಸಹ ಆಗಿದ್ದ ವಿನಯ್ ಅವರು ಮರಣ ಪತ್ರ ಬರೆದಿಟ್ಟು ನಾಗವಾರದ ಬಿಜೆಪಿ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಶಾಸಕರೇ ಕಾರಣ ಎಂದು ಬಿಜೆಪಿ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ.