ಬೆಂಗಳೂರು: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡುವುದರ ಜತೆಗೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಅದರಂತೆ ನವೆಂಬರ್ 13ರಂದು ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಮತ ಎಣಿಕೆಯು ನವೆಂಬರ್ 23ರಂದು ನಡೆಯಲಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಇ.ತುಕಾರಾಂ ಸಂಸದರಾಗಿ ಆಯ್ಕೆಗೊಂಡ ಬಳಿಕ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಇನ್ನೂ ಹೈವೋಲ್ಟೆಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಮೈತ್ರಿ ಹಾಗೂ ಕಾಂಗ್ರೆಸ್ ನಡುವೆ ತೀರಾ ಪೈಪೋಟಿ ಏರ್ಪಟ್ಟಿದೆ.