Daily Horoscope

Select Your Language

Notifications

webdunia
webdunia
webdunia
webdunia

ಪ್ರಧಾನಿಗಳ ರಾಜ್ಯ ಭೇಟಿಯ ಸಂದರ್ಭದಲ್ಲಿ ಹಗುರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ: ವಿಜಯೇಂದ್ರ

BY Vijayendra
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಸಚಿವರು ಹಗುರವಾಗಿ ಮಾತನಾಡುತ್ತಿರುವುದು ಅತ್ಯಂತ ಖಂಡನೀಯ. ಪ್ರಧಾನಿಗಳ ಬಗ್ಗೆ ಮನಸೋ ಇಚ್ಛೆ ಮಾತನಾಡುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಘನತೆಯನ್ನು ತಾವೇ ಕುಗ್ಗಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.
 
ಮೆಟ್ರೋ ಅನುದಾನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ, ಸಚಿವರಾದ ಕೃಷ್ಣಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಗಳನ್ನು ಗಮನಿಸಿದಾಗ ಬೇಸರ ಮತ್ತು ಆಕ್ರೋಶ ಉಂಟಾಗಿದೆ. ಕೃಷ್ಣಬೈರೇಗೌಡರು ನನ್ನ ಭಾಷಣವನ್ನು ಕಟ್ ಮಾಡಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿ ಹೊಂದಿರುವ ಅವರು ಕಳೆದ ಮೂರೂವರೆ ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಿದ್ದಾರೆ, ಯಾವೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂಬುದನ್ನು ಮೊದಲು ಜನರ ಮುಂದೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
 
ಮೆಟ್ರೋ ಅನುದಾನದಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸುವ ಮೊದಲು ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಎಷ್ಟು ಅನುದಾನ ನೀಡಿದೆ ಎಂಬುದನ್ನು ತಿಳಿದುಕೊಳ್ಳಲಿ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಮತ್ತು ಸಚಿವರು ಜವಾಬ್ದಾರಿಯುತವಾಗಿ ಮಾತನಾಡಬೇಕು. ಪ್ರಧಾನಿಗಳು ರಾಜ್ಯಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅವರಿಗೆ ಅಗೌರವ ತರುವ ರೀತಿಯಲ್ಲಿ ಹೇಳಿಕೆ ನೀಡಬಾರದು ಎಂದರು.
 
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಜಯೇಂದ್ರ ಅವರು, ಆ ಪುಣ್ಯಾತ್ಮ ಪ್ರಿಯಾಂಕ್ ಖರ್ಗೆ ಅವರಿಗೆ ಯಾವಾಗ ಬುದ್ಧಿ ಬರುತ್ತದೆಯೋ ಗೊತ್ತಿಲ್ಲ. ನಾಲಿಗೆ ಇದೆ ಎಂದು ಮನಬಂದಂತೆ ಮಾತನಾಡುವುದು ಸರಿಯಲ್ಲ. ತಮ್ಮ ಇಲಾಖೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡುವ ಯೋಗ್ಯತೆಯನ್ನು ತೋರಿಸಲಿ. ಕಾಂಗ್ರೆಸ್ ನಾಯಕರ ಬೇಜವಾಬ್ದಾರಿತನದಿಂದಲೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದರು.
 
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಪ್ರಶಾಂತಿ ಕುಟೀರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ಮೆಟ್ರೋ ಉದ್ಘಾಟನೆ ನೆರವೇರಿಸಿ ಮೈಸೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸಾಗಲಿದ್ದಾರೆ. ಪ್ರಧಾನಿಗಳನ್ನು ಸ್ವಾಗತಿಸಲು ಬೆಂಗಳೂರಿನ ಮೂರ್ನಾಲ್ಕು ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ಬಿಜೆಪಿ ಕಾರ್ಯಕರ್ತರೂ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಆದರೆ ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಫ್ಲೆಕ್ಸ್‌ಗಳನ್ನು ಕಿತ್ತುಹಾಕುವ ಕೆಲಸ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ನ ಹುಟ್ಟುಗುಣ. ಎಷ್ಟೇ ಆದರೂ ಅವರ ಈ ಪ್ರವೃತ್ತಿ ಬದಲಾಗುವುದಿಲ್ಲ ಎಂದು ಟೀಕಿಸಿದರು.
 
ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯುವ ವಿಚಾರವಾಗಿ ಬಿಜೆಪಿ ಮುಂದಿನ ದಿನಗಳಲ್ಲಿ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಲಿದೆ. ಅಲ್ಪಸಂಖ್ಯಾತರಿಗೆ ಸೇನಾ ತರಬೇತಿ ನೀಡಲು ಸರ್ಕಾರ ಮುಂದಾಗಿರುವ ವಿಚಾರವೂ ಆತಂಕಕಾರಿ. ಅಲ್ಪಸಂಖ್ಯಾತರನ್ನು ಹಿಂದೂ ಸಮಾಜದಿಂದ ಪ್ರತ್ಯೇಕಿಸುವ ಮತ್ತು ಸಮಾಜದಲ್ಲಿ ವಿಭಜನೆ ಮೂಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಇಂತಹ ವಿಚಾರಗಳಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ವಿಜಯೇಂದ್ರ ಎಚ್ಚರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೊ ವಿಚಾರದಲ್ಲಿ ರಾಜ್ಯ ಸರಕಾರದ ಕುಚೇಷ್ಟೆ: ತೇಜಸ್ವಿ ಸೂರ್ಯ