ಕಲಬುರಗಿ: ರಾಜ್ಯ ಸರ್ಕಾರ ಜಾತಿಗಣತಿ ನೆಪದಲ್ಲಿ ಹಿಂದೂ ಸಮಾಜವನ್ನು ಒಡೆಯಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಜಾತಿ ಸಮೀಕ್ಷೆ ಕುರಿತು ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ನಿನ್ನೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.
ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯಾನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂದಿಯವರುü ಅದನ್ನು ವಿರೋಧಿಸಿದ್ದರು ಎಂದು ಗಮನ ಸೆಳೆದರು.
ರಾಜ್ಯ ಸರಕಾರವು ಜಾತಿ ಜನಗಣತಿ ನೆಪದಲ್ಲಿ ಪಗಡೆಯಾಟ ಮಾಡಲು ಹೊರಟಿದೆ. ಹಿಂದೂ ಸಮಾಜ ಒಡೆಯಲು ಹೊರಟಿದ್ದಾರೆ. ರಾಜ್ಯ ಸರಕಾರಕ್ಕೆ ಅಧಿಕಾರ ಇದೆಯೋ ಇಲ್ಲವೋ; ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿಲ್ಲ. ಸಿಎಂ ಇಚ್ಛಾಶಕ್ತಿ ಬಗ್ಗೆ ಗೊಂದಲ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ ಜನಗಣತಿ ಮಾಡಲು ಹೊರಟಿದ್ದಾರಾ ಅಥವಾ ಪ್ರಾಮಾಣಿಕವಾಗಿ ಹಿಂದುಳಿದ, ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಲೆಂದು ಇದನ್ನು ಮಾಡುತ್ತಿದ್ದಾರಾ? ಅವರಲ್ಲಿ ಪ್ರಾಮಾಣಿಕ ಕಳಕಳಿ ಕಾಣುತ್ತಿಲ್ಲ; ಜನರಲ್ಲೂ ಅನುಮಾನ ಹುಟ್ಟುಹಾಕಿದ್ದಾರೆ ಎಂದು ಆಕ್ಷೇಪಿಸಿದರು.
ಪ್ರಶ್ನೆಗೆ ಉತ್ತರ ನೀಡಿದ ಅವರು, ಶೋಷಿತ- ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ನ್ಯಾಯ ಕೊಡಬೇಕೆಂಬ ಬದ್ಧತೆ ಬಿಜೆಪಿಗೆ ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಬಿಜೆಪಿ ಅಲ್ಲ ಎಂದು ತಿಳಸಿದರು. ಸಿದ್ದರಾಮಯ್ಯನವರ ಮನಸ್ಥಿತಿಗೆ ನಮ್ಮ ವಿರೋಧ ಇದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಹೈಕೋರ್ಟ್ ಏನು ಆದೇಶ ಮಾಡಿದೆ? ಯಾಕೆ ಕೆಲಸಕ್ಕೆ ಬಾರದ ಪ್ರಶ್ನೆಗಳನ್ನು ಇಟ್ಟುಕೊಂಡಿದ್ದಾರೆ? 60ಕ್ಕೂ ಹೆಚ್ಚು ಪ್ರಶ್ನೆಗಳಿದ್ದು, ಇದರಲ್ಲಿ ಎಲ್ಲವೂ ಕಡ್ಡಾಯವಲ್ಲ ಎಂದು ರಾಜ್ಯ ಹೈಕೋರ್ಟ್ ತಿಳಿಸಿದೆ ಎಂದು ಗಮನ ಸೆಳೆದರು.