ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅಲ್ಲದೇ ಪತ್ರಕರ್ತರ ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಂಶ ತಿಳಿಯಲು ಇಲ್ಲಿ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ರಾಜಕಾರಣದ ಪ್ರಶ್ನೆ ಇಲ್ಲ; ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.
ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ; ಈ ಬೇಜವಾಬ್ದಾರಿತನ ಏನಿದೆಯೋ ಅದನ್ನು ಸರಕಾರ ಈಗಲಾದರೂ ಎಚ್ಚತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಗಮನ ಸೆಳೆಯುತ್ತೇವೆ ಎಂದು ತಿಳಿಸಿದರು.
ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ: ಛಲವಾದಿ ನಾರಾಯಣಸ್ವಾಮಿ
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರವೇ ಇಂಥ ಪರಿಸ್ಥಿತಿಗೆ ಕಾರಣ ಎಂದು ಟೀಕಿಸಿದರು. ಕಾಂಗ್ರೆಸ್ಸಿಗರು ಭ್ರಷ್ಟಾಚಾರ ಮಾಡುವ ಕಡೆ ಗಮನ ಕೊಡುತ್ತಿದ್ದು, ಆಸ್ಪತ್ರೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ. ಔಷಧಿ ಕೊಂಡುಕೊಳ್ಳುವಾಗ ಬ್ಲಾಕ್ ಮಾಡಿದ ಕಳಪೆ ಔಷಧಿಗಳನ್ನು ಖರೀದಿಸಿ ಬಳಸಿದ್ದರಿಂದ ಅನೇಕ ಕಡೆ ಇಂಥ ದಾರುಣ ಘಟನೆಗಳು ನಡೆದಿವೆ ಎಂದು ವಿವರಿಸಿದರು.
ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಸೇರಿ ನಾವೆಲ್ಲ ಇಲ್ಲಿಗೆ ಭೇಟಿ ಕೊಟ್ಟಿದ್ದೇವೆ. ವಸ್ತುಸ್ಥಿತಿಯನ್ನು ವೈದ್ಯರಿಂದ ತಿಳಿದುಕೊಳ್ಳುತ್ತೇವೆ ಎಂದು ಹೇಳಿದರು.