ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಐಎಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಅವರು ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಖಾಸಗಿ ದೂರು ದಾಖಲಿಸಿದ್ದಾರೆ. ಸಮಕ್ಷ ಪ್ರಾಧೀಕಾರದ ಅನುಮತಿ ಪಡೆಯಬೇಕಿತ್ತು. ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಅದಲ್ಲದೆ ರಾಜ್ಯ ಸರಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದೆ ಎಂದು ಉಲ್ಲೇಖಿಸಿದ್ದಾರೆ.
ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿರುವುದನ್ನು ಪರಿಗಣಿಸದೆ ಮಡಿಕೇರಿ ಹೆಚ್ಚುವರಿ ಕೆಜೆಎಂಎಫ್ ಕೋರ್ಟ್ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿಯವರು ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ