ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮುಗಿಯದ ಕಾರಣ ಶಾಲಾ ಮಕ್ಕಳಿಗೆ ದಸರಾ ರಜೆ ವಿಸ್ತರಿಸಿರುವುದು ಕಲಿಕೆಯಲ್ಲಿ ಹಿಂದುಳಿಯುವಂತಾಗಿದ್ದು ಇದರಿಂದ ಶಿಕ್ಷಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕೆ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿಯಿಲ್ಲದೆ ತರಾತುರಿಯಲ್ಲಿ ಸಮೀಕ್ಷೆ ನಡೆಸುತ್ತಿದ್ದು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲೇ ಏರುಪೇರಾಗಿದೆ. ಇನ್ನೂ ಶಿಕ್ಷಕರಿಗೆ ಕಿರುಕುಳ ನೀಡಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದರು.
ರಜೆಗಳನ್ನು ವಿಸ್ತರಿಸಿರುವುದರಿಂದ ಪಾಠ ನಿಂತು ಹೋಗಿವೆ. ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ ಮುಖ್ಯ. ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕಿಯರು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಕಷ್ಟ ಆಲಿಸುವ ವ್ಯವಧಾನ ಸರ್ಕಾರಕ್ಕೆ ಇಲ್ಲವಾಗಿದೆ ಎಂದು ವಿಜಯೇಂದ್ರ ಕಿಡಿಕಾರಿದರು.