ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿರುವ ಹೊಸ ಎಚ್‌ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ರಾಜ್ಯದಲ್ಲಿ ಪತ್ತೆಯಾದ ಹಿನ್ನಲೆ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಈ ಬಗ್ಗೆ ಅವರು ಮಾತನಾಡಿದರು.
ಚೀನಾದಲ್ಲಿ ಎಚ್‌ಎಂಪಿ ವೈರಾಣು ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲೂ ಈ ವೈರಾಣು ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಾಣು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಾಣು ಹರಡದಂತೆ ತಡೆಯಲು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಪುನಃ ಆರಂಭಿಸುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.