Publish Date: Mon, 29 Dec 2025 (09:53 IST)
Updated Date: Mon, 29 Dec 2025 (09:55 IST)
ಬೆಂಗಳೂರು: ಕನ್ನಡ ಪರ ಹೋರಾಟಗಾರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ವಿವಿಧ ಕನ್ನಡ ಸಂಘಟನೆಗಳು ಆಯೋಜಿಸಿದ್ದ ಜನರಾಜ್ಯೋತ್ಸವ -2025ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ.
ಈ ವೇಳೆ ಕನ್ನಡ ಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನೂ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಕನ್ನಡ ಪರ ಹೋರಾಟದ ಸಂದರ್ಭದಲ್ಲಿ ದಾಖಲಾಗಿರುವ ಕೇಸ್ ಗಳೆಲ್ಲವೂ ವಜಾಗೊಳ್ಳಲಿದೆ.
ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡದ ವಿಷಯದಲ್ಲಿ ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ಕನ್ನಡದ ಪರಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇನೆ. ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿ ಸಿಕ್ಕಿದ ಕೂಡಲೇ ಜಾರಿ ಮಾಡಲಾಗುವುದು. ಕೇಂದ್ರ ಸರ್ಕಾರ ಕೃಷ್ಣ ಮೂರನೇ ಹಂತ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಕನ್ನಡಿಗರು ಖಂಡಿಸಬೇಕು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು. ಕನ್ನಡಿಗರು ಯಾವುದಕ್ಕೂ ಕಡಿಮೆಯಿಲ್ಲ. ಕನ್ನಡ ಭಾಷೆ, ನೆಲ, ಜಲ, ಗಡಿಗಳ ರಕ್ಷಣೆಗೆ ಪಣ ತೊಡೋಣ ಎಂದಿದ್ದಾರೆ.