ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೈಕಮಾಂಡ್ ಭೇಟಿಗೆ ಮುಂದಾಗಿರುವ ಅವರ ಬೆಂಬಲಿಗ ಶಾಸಕರಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇನ್ನು ಡಿಕೆ ಶಿವಕುಮಾರ್ ಗೂ ಅವಕಾಶ ಸಿಗಬೇಕು ಎಂದು ಅವರ ಬೆಂಬಲಿಗರು ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ.
ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಗಡಿ ಶಾಸಕ ಬಾಲಕೃಷ್ಣ ಸೇರಿದಂತೆ ಪ್ರಮುಖ ನಾಯಕರು ಈ ಲಿಸ್ಟ್ ನಲ್ಲಿದ್ದಾರೆ. ವಿಶೇಷವಾಗಿ ಒಕ್ಕಲಿಗ ನಾಯಕರು ಡಿಕೆಶಿ ಪರ ಬ್ಯಾಟ್ ಬೀಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಡಿಕೆಶಿ ಪರ ಲಾಬಿ ನಡೆಸಲು ಪ್ರಯತ್ನಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ಅಲರ್ಟ್ ಆದ ಸಿಎಂ ಸಿದ್ದರಾಮಯ್ಯ ಖುದ್ದಾಗಿ ತಾವೇ ಈ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಒಕ್ಕಲಿಗ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ಸಿಎಂ ಮಾಡುತ್ತಿದ್ದಾರೆ.