ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಹುಕುಂ ನೀಡುತ್ತಿದ್ದ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರಿಂದಲೇ ಈಗ ತಮ್ಮ ಆಪ್ತ ಬಳಗದೊಂದಿಗೆ ಪ್ರತ್ಯೇಕ ಸಭೆ ನಡೆಯುತ್ತಿದೆ.
ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ನವಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ, ಐದು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಮೊನ್ನೆಯಷ್ಟೇ ಹೇಳಿಕೆ ನೀಡಿದ್ದರು. ಇದು ಡಿಕೆಶಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ.
ಅಚ್ಚರಿಯೆಂದರೆ ಈ ಬಾರಿ ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದಾಗಲೂ ಡಿಕೆಶಿ ಅವರನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಇತ್ತ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರೊಮದಿಗೆ ರಹಸ್ಯ ಮಾತುಕತೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರನ್ನು ಕರೆಸಿಕೊಂಡು ಸಂಪುಟ ಪುನರಾರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರೂ ಪ್ರತ್ಯೇಕ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಔತಣ ಕೂಟ ನೀಡಲಿದ್ದು ರಾಜ್ಯ ರಾಜಕೀಯದ ಬಗ್ಗೆ ಮತ್ತಷ್ಟು ಕುತೂಹಲ ಗರಿಗೆದರಿವೆ.