ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ಬಿಜೆಪಿ ರಾಜ್ಯ ಸರ್ಕಾರವನ್ನು ದೂಷಿಸುತ್ತಿದ್ದರೆ, ಕಾಂಗ್ರೆಸ್ ಕೇಂದ್ರ ಸರ್ಕಾರದತ್ತ ಗೂಬೆ ಕೂರಿಸುತ್ತಿದೆ. ಹಾಗಿದ್ದರೆ ಮೆಟ್ರೊ ಪ್ರಯಾಣ ದರಕ್ಕೆ ಯಾರು ಕಾರಣ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
ನಮ್ಮ ಮೆಟ್ರೊ ಎಂಬುದು ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಎರಡೂ ಸಮಪಾಲು ಹೊಂದಿದೆ. ದರ ಹೆಚ್ಚಳವಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಹಜ. ಆದರೆ ಜವಾಬ್ಧಾರಿಯುತ ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ವಾಸ್ತವಾಂಶವನ್ನು ಮರೆ ಮಾಚಿ ಸುಳ್ಳು ಹರಡುತ್ತಿದೆ.
ಮೆಟ್ರೊ ಪ್ರಯಾಣ ದರ ಹೆಚ್ಚಳ ಮಾಡುವಂತೆ ಈ ಹಿಂದೆ ಬಿಎಂಆರ್ ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಒಂದು ವೇಳೆ ಮೆಟ್ರೊ ಕೇವಲ ರಾಜ್ಯ ಸರ್ಕಾರದ ನಿಯಂತ್ರಣದಲ್ಲಿದ್ದರೆ ಅಂದು ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯಬೇಕಿತ್ತು? ಅಲ್ಲದೆ ಅಂದು ದರ ಪರಿಷ್ಕರಣೆಗೆ ನಿವೃತ್ತ ನ್ಯಾಯಮೂರ್ಥಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಚಿತ್ತು. 2024 ರ ಸೆಪ್ಟೆಂಬರ್ 16 ರಂದು ಅಧಿಕಾರ ಸ್ವೀಕರಿಸಿದ ಸಮಿತಿಗೆ ಮೂರು ತಿಂಗಳೊಳಗಾಗಿ ವರದಿ ನೀಡಲು ಕೇಂದ್ರ ಸರ್ಕಾರ ಸೂಚಿಸಿತ್ತು.
ಕೇವಲ ಬೆಂಗಳೂರು ಮಾತ್ರವಲ್ಲ, ಚೆನ್ನೈ, ದೆಹಲಿ ನಗರಗಳಿಗೆ ತೆರಳಿ ಅಲ್ಲಿನ ಮೆಟ್ರೊ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲೂ ಕಾರ್ಯಾಚರಣೆ ಮತ್ತು ಪ್ರಯಾಣ ದರ ಬಗ್ಗೆ ಸಮಾಲೋಚನೆ ನಡೆಸಿತ್ತು.
ದೆಹಲಿ ಮೆಟ್ರೊ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳ ಮೊದಲ ಹಂತದ ಪ್ರಯಾಣ ದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೊ ರೈಲ್ವೆ ಕಾಯಿದೆಯ ಸೆಕ್ಷನ್ 37 ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೊ ರೈಲು ನಿಗಮಗಳು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಸಿಎಂ ವಿವರಣೆ ನೀಡಿದ್ದಾರೆ.