ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಸಮಸ್ಯೆ ಕಾಣಿಸಿಕೊಂಡಿದ್ದು ಇಂದು ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ನಾಳೆ ಮತ್ತೆ ಪೂರ್ವ ನಿಗದಿತ ಕಾರ್ಯಕ್ರಮ ನಿಮಿತ್ತ ದೆಹಲಿಗೆ ತೆರಳಲಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಮತ್ತು ಸಚಿವ ಜಮೀರ್ ಅಹ್ಮದ್ ಜೊತೆಗೆ ನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದ್ದರು. ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.
ನಿನ್ನೆಯೇ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಾಗಿದ್ದರೂ ಇಂದು ಯಾವುದೇ ಪೂರ್ವ ನಿಗದಿತ ಕಾರ್ಯಕ್ರಮವಿಲ್ಲದೇ ಇರುವುದರಿಂದ ಒಂದು ದಿನ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಇನ್ನು ಡಿಕೆ ಶಿವಕುಮಾರ್ ಇಂದೇ ದೆಹಲಿಗೆ ತೆರಳಲಿದ್ದು ಅವರೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಮೇಲ್ಮನೆಗೆ ಸದಸ್ಯರನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.