ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದು ಅವರು ಹೇಳಿದರು.
ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ತೊಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲ ಅಂದಿದ್ರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.
ದಲಿತ ಸಂಘರ್ಷ ಸಮಿತಿಯ ಸಾರಾಯಿ ಬೇಡ, ಶಾಲೆ ಬೇಕು ಎನ್ನುವ ಘೋಷ ವಾಕ್ಯ ಮೂಲಕ ನಾನು ಡಿಸಿಎಂ ಆಗಿದ್ದ ವೇಳೆ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದರು.