Select Your Language

Notifications

webdunia
webdunia
webdunia
webdunia

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರಶ್ನೆಗಳ ಬಾಣ ಹೀಗಿತ್ತು

Siddaramaiah

Krishnaveni K

ಬೆಂಗಳೂರು , ಶನಿವಾರ, 25 ಜನವರಿ 2025 (15:07 IST)
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಇಂದು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳ ಬಾಣವನ್ನೇ ಸುರಿಸಿದ್ದಾರೆ. ಅವರ ವಾಗ್ದಾಳಿಯ ವೈಖರಿ ಹೀಗಿತ್ತು ನೋಡಿ.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದ ಸಿ.ಎಂ ಸಿದ್ದರಾಮಯ್ಯ.

*ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

*ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

*ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

*ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

*RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

*ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.

*ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

*ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಕೇಳಿದ ಸಿಎಂ

*ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ತಕರಾರು ವ್ಯಕ್ತಪಡಿಸಿ,  ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು  ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

*ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಇದನ್ನೆಲ್ಲಾ ಸಹಿಸುವುದಿಲ್ಲ: ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ