ಮೈಸೂರು: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ನಿಂದ ಕಣಕ್ಕಿಳಿಯಬಹುದು ಎಂಬ ವದಂತಿಗಳ ನಡುವೆ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮಹತ್ವದ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದರು.
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.
ಇನ್ನು, ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾಕಷ್ಟು ಅನಾಹುತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದರು.