Select Your Language

Notifications

webdunia
webdunia
webdunia
webdunia

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಮಂಗಳವಾರ, 2 ಸೆಪ್ಟಂಬರ್ 2025 (13:07 IST)

ಬೆಂಗಳೂರು: ಬಿಜೆಪಿಯವರು ನಿನ್ನೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿರುವ ಬಗ್ಗೆ ಮತ್ತು ಧರ್ಮಸ್ಥಳ ಚಲೋ ಅಭಿಯಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು ಸೌಜನ್ಯ ಪ್ರಕರಣ ಮರು ತನಿಖೆಯಾಗಬೇಕಾದರೆ ನ್ಯಾಯಾಲಯಕ್ಕೆ ಹೋಗಲಿ. ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವವರು ನಾವಲ್ಲ ಎಂದು ಕಿಡಿ ಕಾರಿದ್ದಾರೆ.

‘ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಈಗ ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?

ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್‌ಐಟಿಯು ತನಿಖೆಯನ್ನು ಸ್ವತಂತ್ರವಾಗಿ ಮಾಡುತ್ತಿದ್ದು, ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು.

ವಿರೋಧ ಪಕ್ಷದವರು ಟೀಕೆಯನ್ನು ಮಾಡಲಿ. ಆದರೆ ಎಲ್ಲಾ ವಿಷಯಗಳನ್ನೂ ರಾಜಕೀಯಗೊಳಿಸಲು ಹೋಗಬಾರದು. ಬಿಜೆಪಿಯವರ ಈಗಿನ ಆರೋಪಗಳಲ್ಲಿ ಸತ್ಯವಿಲ್ಲ.

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದಾರೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ? ಒಂದು ಕಡೆ ವೀರೇಂದ್ರ ಹೆಗ್ಗಡೆಯವರ ಪರ ಎನ್ನುತ್ತಾರೆ, ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ. ನಿಜವಾಗಿಯೂ ಇವರು ಯಾರ ಪರ?

ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಯಾರು ಎಂಬ ಬಗ್ಗೆ ಸದನದಲ್ಲಿ ಚರ್ಚೆಯಾದಾಗ ಅಂದು ಬೇರೆ ರೀತಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್ ಈಗ ಬೇರೆ ಕತೆ ಹೇಳುತ್ತಿದ್ದಾರೆ. ಹೀಗೆ ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು.

12 ವರ್ಷಗಳ ಹಿಂದೆ ಅಪಹರಣವಾಗಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಎಸ್ಐಟಿಗೆ ಮಹಿಳೆಯೊಬ್ಬರು ದೂರ ನೀಡಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆದಾಗ ಏಕೆ ಹೇಳಲಿಲ್ಲ? ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಕೂಡ ಅಪರಾಧ.

ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು, ನಾವಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಕೆಂಡ ಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ