ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಠಮಾರಿ ಧೋರಣೆಯನ್ನು ಬಿಟ್ಟು ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಅನಿರ್ದಿಷ್ಟಾವದಿ ಮುಷ್ಕರಕ್ಕೆ ರಾಜ್ಯ ಸರಕಾರವೇ ನೇರ ಹೊಣೆ. ರಾಜ್ಯ ಸರಕಾರ ನಿದ್ರಾವಸ್ಥೆಯಲಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ಡಿಸೇಲ್ ದರ ಕಡಿಮೆಯಾದಾಗ ಪ್ರಯಾಣ ದರವನ್ನು ಕಡಿಮೆ ಮಾಡಿಲ್ಲ. ಖಾಸಗಿ ಬಸ್ ನಡೆಸುವವರೆಗೆ ಲಾಭ ಆಗುತ್ತಿದೆ. ಆದರೆ, ಸರಕಾರಿ ಸಾರಿಗೆ ಇಲಾಖೆಗೆ ಯಾಕೆ ಲಾಭವಾಗುತ್ತಿಲ್ಲ. ಇದು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ತಿಳಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡುತ್ತಿದ್ದಾರೆ ಎಂದು ಗೊತ್ತಿದ್ದರು ಕೂಡಾ ಮುಷ್ಕರಕ್ಕೆ ಅವಕಾಶ ಮಾಡಿಕೊಟ್ಟಿದ್ದೀರಿ. ರಾಜ್ಯ ಸರಕಾರ ಹಠಮಾರಿ ಧೋರಣೆಯನ್ನು ನಿಲ್ಲಿಸಬೇಕು. ಸಾರಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು 10 ಪ್ರತಿಶತಗಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಹೇಳುವುದು ಸರಿಯಲ್ಲ. ಈ ಕುರಿತು ಸರಕಾರ ಹಾಗೂ ಸಾರಿಗೆ ನೌಕರರ ಸಂಘಟನೆಗಳು ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.