ನಿನ್ನೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ದಲಿತ ಸಿಎಂ ಆಕಾಂಕ್ಷಿ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿಯೇ ಮಹಾದೇವಪ್ಪ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುವ ಘಳಿಗೆ ಹತ್ತಿರವಾಗಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ರಾಜಕೀಯವಾಗಿ ಬಳಸಿಕೊಂಡು ಬೀಸಾಡಿದ ಸಿಎಂ ಸಿದ್ದರಾಮಯ್ಯ, ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಆದರೆ, ಅದು ಲಾಭದಾಯಕವಲ್ಲ ಎಂದು ಹೇಳಿದರು.
ಮಹದೇವಪ್ಪ ಅವರನ್ನು ಮುಂದಿನ ಸಿಎಂ ಎಂದು ಘೋಷಿಸಿದ ಕ್ರಮವೇ ರಾಜ್ಯದಲ್ಲಿ ಕಾಂಗ್ರೆಸ್ ವೀಕ್ ಆಗಿದೆ ಎನ್ನುವದರ ಸಂಕೇತ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಏನೇ ಹೇಳಿದರು ತಡೆಯುವವರೂ ಯಾರು ಇಲ್ಲ ಎಂದು ವ್ಯಂಗ್ಯವಾಡಿದರು
ಮೈಸೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಚಿವ ರೋಷನ್ ಬೇಗ್ ಬಾಯಿತಪ್ಪಿ ಭಾವಿ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿರುವುದು ಬಿಜೆಪಿಗೆ ಹೊಸ ಟೀಕಾಸ್ತ್ರ ದೊರೆತಂತಾಗಿದೆ.
ಶ್ರೀನಿವಾಸ್ ಪ್ರಸಾದ್ ಅವರಿಗೆ ಆಹ್ವಾನ.....
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ತೊರೆದಿರುವ ಶ್ರೀನಿವಾಸ್ ಪ್ರಸಾದ್ ಅವರ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಒಂದು ವೇಳೆ ಪ್ರಸಾದ್ ಅವರು ಬಿಜೆಪಿಗೆ ಬಂದರೆ, ದಲಿತರು ಹಾಗೂ ಹಿಂದುಳಿದ ವರ್ಗದ ಬಲ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ದೊರೆಯಲಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ