Publish Date: Tue, 28 Mar 2023 (14:44 IST)
Updated Date: Tue, 28 Mar 2023 (14:08 IST)
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ, ಗೃಹಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದರು.
ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ, ಜಿಲ್ಲಾ ಪೋಲಿಸ್ ಮುಖ್ಯಸ್ಥ ಮಿಥುನ್ ಕುಮಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳೂ ಉಪಸ್ಥಿತರಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವರು, ಸರ್ಕಾರ ಪರಿಶಿಷ್ಠ ಜಾತಿ ಸಮುದಾಯಗಳಿಗೆ ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಠಾನ ಮಾಡಿಲ್ಲ. ಈ ಕುರಿತು ವಿರೋಧಪಕ್ಷದ ನಾಯಕರು ಅಪಪ್ರಚಾರ ನಡೆಸಿ, ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.