Publish Date: Fri, 08 May 2026 (17:15 IST)
Updated Date: Fri, 08 May 2026 (17:21 IST)
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ, 45 ಪ್ರಯಾಣಿಕರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಹೊನ್ನಾಳಿ ತಾಲ್ಲೂಕಿನ ಕುಂದ್ರು ಗ್ರಾಮದ ನಿವಾಸಿ ದರ್ಶನ್ (23) ಎಂದು ಗುರುತಿಸಲಾಗಿದೆ. , ಆತ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಕಾಲೇಜಿಗೆ ತೆರಳಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುಗಳಲ್ಲಿ ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೊಲೀಸರ ಪ್ರಕಾರ, ದಾವಣಗೆರೆಯಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದಾಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮರಬನಹಳ್ಳಿ ಬಳಿ ಬಸ್ ಪಲ್ಟಿಯಾಗಿದೆ.
ಬಸ್ಸಿನ ಹಿಂಭಾಗದ ಆಕ್ಸಲ್ ಮುರಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.