ಬೆಳಗಾವಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿರುವ ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣದಲ್ಲಿ ವೈದ್ಯರು ಮತ್ತು ಸಿಬ್ಬಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ
ಕಿರು ಮೃಗಾಲಯಕ್ಕೆ ಸೋಮವಾರ ಭೇಟಿ ನೀಡಿ, ಪ್ರಕರಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮೇಲ್ನೋಟಕ್ಕೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದಿದ್ದು ಪ್ರಾಣಿಗಳ ಒಳಾಂಗಗಳ ಪರೀಕ್ಷೆ ವರದಿ ಮತ್ತು ತನಿಖಾ ವರದಿಗೆ ಕಾಯುತ್ತಿದ್ದೇವೆ. ಸಿಬ್ಬಂದಿ ಲೋಪವೆಸಗಿರುವುದು ದೃಢಪಟ್ಟರೆ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಅಳಿವಿನಂಚಿನಲ್ಲಿರುವ ಕೃಷ್ಣಮೃಗಗಳಂಥ ಪ್ರಬೇಧಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂಖ್ಯೆ ಹೆಚ್ಚಿಸಲು ಮೃಗಾಲಯದಲ್ಲಿ ಇರಿಸಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಅವು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಪರೀಕ್ಷಾ ವರದಿಗೆ ನಾವು ಕಾಯುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದರು.
ಪ್ರಾಣಿಗಳ ಆರೋಗ್ಯವನ್ನು ನಿಯಮಿತವಾಗಿ ಮೃಗಾಲಯದಲ್ಲಿನ ವೈದ್ಯಕೀಯ ತಂಡವು ಮೇಲ್ವಿಚಾರಣೆ ಮಾಡಬೇಕು. ಆದರೆ ಇದೀಗ ಬೆಳಗಾವಿ ಮೃಗಾಲಯದಲ್ಲಿ ಅದು ನಡೆದಿಲ್ಲ ಎಂಬಂತೆ ತೋರುತ್ತಿದೆ.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಕೂಡ ಭಾನುವಾರ ಕಿರು ಮೃಗಾಲಯಕ್ಕೆ ಭೇಟಿ ನೀಡಿದ್ದು, ವರದಿ ಸಲ್ಲಿಸಲಿದ್ದಾರೆ.