ನೈಸ್ ಬಗ್ಗೆ ಸದನ ಸಮಿತಿ ಮಾಡಿದ್ದರು. ಸದನ ಸಮಿತಿ ವರದಿ ಕೊಟ್ಟಿತ್ತು. ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಮೈಸೂರು ರೋಡ್ ಮಾಡಿದ ಮೇಲೆ ಟೋಲ್ ಸಂಗ್ರಹಿಸಬೇಕು ಅಂತ ಇತ್ತು. ಆದರೆ ರಸ್ತೆ ಮಾಡದೇ ಟೋಲ್ ಸಂಗ್ರಹಿಸುತ್ತಿದ್ದಾರೆ ಎಂದು ಹೆಚ್ ಡಿ ದೇವೇಗೌಡ ಆರೋಪಿಸಿದರು.
ನೈಸ್ ಸಂಸ್ಥೆಯ ವಿರುದ್ಧ ಮತ್ತೆ ತೊಡೆ ತಟ್ಟಿ ನಿಂತಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ನೈಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ಇಲ್ಲದೆ ಹೆಚ್ಚಳ ಮಾಡಿದೆ. ನೈಸ್ ಸಂಸ್ಥೆಯು ಸರ್ಕಾರದ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿದೆ. ನೈಸ್ ಅಕ್ರಮದ ಬಗ್ಗೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ ಎಂದರು.