Publish Date: Thu, 10 Sep 2026 (15:10 IST)
Updated Date: Thu, 10 Sep 2026 (15:13 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಆಡಳಿತ ಹಾಗೂ ಪಕ್ಷದ ಸಂಘಟನೆಯ 100 ದಿನಗಳ ಪೂರೈಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ 3 ಮಹಾ ಸಂಕಲ್ಪ ಹಾಗೂ 9 ಪ್ರಮುಖ ಸಂಕಲ್ಪಗಳನ್ನು ಪ್ರಕಟಿಸಿದ್ದಾರೆ.
ಮಹಾ ಮೂರು ಸಂಕಲ್ಪಗಳು ಹೀಗಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಮೂಲಸೌಕರ್ಯ ವೃದ್ಧಿ ಮತ್ತು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಸ್ಥಾನಮಾನವನ್ನು ಎತ್ತಿಹಿಡಿಯುವುದು. ಸಂವಿಧಾನದ ಮೌಲ್ಯಗಳನ್ನು ರಕ್ಷಿಸಿ, ಎಲ್ಲಾ ಸಮುದಾಯಗಳ ನಡುವೆ ಶಾಂತಿ, ಬಾಂಧವ್ಯ ಹಾಗೂ ಸಮಾನ ಅವಕಾಶಗಳನ್ನು ಖಚಿತಪಡಿಸುವುದು. ಭ್ರಷ್ಟಾಚಾರ ರಹಿತ, ಹೊಣೆಗಾರಿಕೆಯುಳ್ಳ ಆಡಳಿತದ ಮೂಲಕ ಸರ್ಕಾರದ ಪ್ರತಿಯೊಂದು ಯೋಜನೆಯನ್ನು ಸಾರ್ವಜನಿಕರಿಗೆ ನೇರವಾಗಿ ತಲುಪಿಸುವುದು ಎಂದು ಶಿವಕುಮಾರ್ ಹೇಳಿದ್ದಾರೆ.
ಇದರ ಜೊತೆಗೆ 9 ಸಂಕಲ್ಪಗಳೂ ಮಾಡಿದೆ. ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಕೊನೆಯ ಹಂತದ ಅರ್ಹ ಫಲಾನುಭವಿಗೂ ತಲುಪುವಂತೆ ಮಾಡುವುದು. ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣ, ತ್ಯಾಜ್ಯ ನಿರ್ವಹಣೆ ಮತ್ತು ಮೂಲಸೌಕರ್ಯಗಳನ್ನು ಜಾಗತಿಕ ಮಟ್ಟಕ್ಕೆ ಏರಿಸುವುದು. ಮೇಕೆದಾಟು, ಮಹಾದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ವೇಗ ನೀಡಲಾಗುವುದ ಎಂದು ತಿಳಿಸಿದ್ದಾರೆ.
ಯುವನಿಧಿ ಯೋಜನೆಯ ಜೊತೆಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಗೌರವವನ್ನು ಹೆಚ್ಚಿಸುವುದು. ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾಹ, ಬೆಂಬಲ ಬೆಲೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಬಲ ತುಂಬುವ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದರು.
ಸರ್ಕಾರಿ ಶಾಲೆ-ಕಾಲೇಜುಗಳು ಹಾಗೂ ಆಸ್ಪತ್ರೆಗಳ ಸುಧಾರಣೆ ಮಾಡಿ ಬಡವರಿಗೆ ಉಚಿತ ಮತ್ತು ಉತ್ತಮ ಸೇವೆ ನೀಡುವುದು. ಬೆಂಗಳೂರು ಮಾತ್ರವಲ್ಲದೆ 2ನೇ ಮತ್ತು 3ನೇ ಹಂತದ ನಗರಗಳಿಗೂ ಹೂಡಿಕೆ ಆಕರ್ಷಿಸಿ ಕೈಗಾರಿಕೆಗಳನ್ನು ವಿಸ್ತರಿಸುವುದು. ಬೂತ್ ಮಟ್ಟದಿಂದ ಪಕ್ಷದ ಸಂಘಟನೆ ಬಲಪಡಿಸಿ, ಶ್ರಮಿಸಿದ ಕಾರ್ಯಕರ್ತರಿಗೆ ಸೂಕ್ತ ಅಧಿಕಾರ ಮತ್ತು ಗೌರವ ನೀಡುವುದು ಎಂದು ಶಿವಕುಮಾರ್ ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ