ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.
ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಮತ್ತು ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಮ್ಮನ್ನು ಗುರಿಯಾಗಿಸಿಕೊಂಡಿದೆ. ನಾನು ಎಫ್‌ಐಆರ್ ಮತ್ತು ದೂರಿನ ವಿಷಯವನ್ನು ಓದಿದ್ದೇನೆ. ಇದು ಸಂಪೂರ್ಣವಾಗಿ ಹಾಸ್ಯಾಸ್ಪದ ಮತ್ತು ಸ್ಪಷ್ಟವಾಗಿ ದುರುದ್ದೇಶಪೂರಿತವಾಗಿದೆ. ನಾನು ಪತ್ರಿಕಾಗೋಷ್ಠಿಯಲ್ಲಿ ಅವರ ವಿರುದ್ಧ ಆರೋಪ ಮಾಡಿದ್ದೇನೆ ಎಂದು ದೂರುದಾರರು ಹೇಳಿಕೆ ನೀಡಿದ್ದು, ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇನೆಯೇ? ಅವರು ಬೇಕಿದ್ದರೆ ನನ್ನ ಪತ್ರಿಕಾಗೋಷ್ಠಿಯ ವಿಡಿಯೋವನ್ನು ಪರಿಶೀಲಿಸಬಹುದು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.<>